Add parallel Print Page Options

ಯೇಸು ತನ್ನ ಮರಣದ ಕುರಿತು ಮುಂತಿಳಿಸಿದ್ದು

(ಮತ್ತಾಯ 16:21-28; ಲೂಕ 9:22-27)

31 ನಂತರ ಯೇಸು ತನ್ನ ಶಿಷ್ಯರಿಗೆ ಉಪದೇಶಿಸುತ್ತಾ “ಮನುಷ್ಯಕುಮಾರನು ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಿರಿಯ ಯೆಹೂದ್ಯನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಆತನನ್ನು ತಿರಸ್ಕರಿಸಿ ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬರುತ್ತಾನೆ” ಎಂದು ಹೇಳಿದನು. 32 ಮುಂದೆ ಸಂಭವಿಸುವದೆಲ್ಲವನ್ನು ಯೇಸು ಅವರಿಗೆ ಹೇಳಿದನು. ಆತನು ಯಾವುದನ್ನೂ ರಹಸ್ಯವಾಗಿ ಇಡಲಿಲ್ಲ.

ಪೇತ್ರನು ಯೇಸುವನ್ನು ಸ್ವಲ್ಪದೂರ ಕರೆದೊಯ್ದು, “ನೀನು ಹಾಗೆಲ್ಲಾ ಹೇಳಕೂಡದು” ಎಂದು ಪ್ರತಿಭಟಿಸಿದನು. 33 ಆದರೆ ಯೇಸು ತನ್ನ ಶಿಷ್ಯರ ಕಡೆಗೆ ನೋಡಿ, ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ” ಎಂದು ಗದರಿಸಿದನು.

34 ನಂತರ ಯೇಸು ಜನರನ್ನು ತನ್ನ ಬಳಿಗೆ ಕರೆದನು. ಆತನ ಶಿಷ್ಯರೂ ಅಲ್ಲಿದ್ದರು. ಯೇಸು ಅವರಿಗೆ, “ಯಾವನಿಗಾದರೂ ನನ್ನನ್ನು ಅನುಸರಿಸಲು ಮನಸ್ಸಿದ್ದರೆ, ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಬೇಕು. 35 ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲು ಇಚ್ಛಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ಹಾಗೂ ಸುವಾರ್ತೆಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ತನ್ನ ಪ್ರಾಣವನ್ನು ನಿರಂತರವಾಗಿ ಕಾಪಾಡಿಕೊಳ್ಳುತ್ತಾನೆ. 36 ಒಬ್ಬನು ಪ್ರಪಂಚವನ್ನೆಲ್ಲಾ ಸಂಪಾದಿಸಿಕೊಂಡು ತನ್ನ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅದರಿಂದ ಅವನಿಗೆ ಪ್ರಯೋಜನವೇನು? 37 ಒಬ್ಬನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಸಾಧ್ಯವೇ? 38 ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು.

ಆಮೇಲೆ ಯೇಸು ಜನರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ನಿಮ್ಮಲ್ಲಿ ಕೆಲವು ಜನರು ತಾವು ಸಾಯುವುದಕ್ಕೆ ಮುಂಚೆ ದೇವರ ರಾಜ್ಯವು ಅಧಿಕಾರದೊಡನೆ ಬರುವುದನ್ನು ನೋಡುತ್ತಾರೆ” ಎಂದು ಹೇಳಿದನು.