Add parallel Print Page Options

ಮೊದಲನೆ ಭಾಗ

(ಕೀರ್ತನೆಗಳು 1–41)

ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ,
    ಪಾಪಿಗಳಂತೆ ಜೀವಿಸದೆ,
ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ
    ಅವನೇ ಭಾಗ್ಯವಂತನು.
ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ
    ಅದನ್ನೇ ಹಗಲಿರುಳು ಧ್ಯಾನಿಸುವನು.
ಅವನು ನೀರಿನ ಕಾಲುವೆಗಳ ಬಳಿಯಲ್ಲಿ
    ಹುಲುಸಾಗಿ ಬೆಳೆದಿರುವ ಮರದಂತಿರುವನು.
ಆ ಮರವು ತಕ್ಕಕಾಲದಲ್ಲಿ ಫಲಿಸುವುದು;
    ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು;
ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.

ದುಷ್ಟರಾದರೋ ಹಾಗಲ್ಲ!
    ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು.
ನ್ಯಾಯತೀರ್ಪಿನ ಕಾಲ ಬಂದಾಗ ದುಷ್ಟರಿಗೆ ಅಪರಾಧಿಗಳೆಂದು ತೀರ್ಪಾಗುವುದು.
    ಪಾಪಿಗಳಿಗೆ ನೀತಿವಂತರ ಮಧ್ಯದಲ್ಲಿ ಸ್ಥಳವಿರುವುದಿಲ್ಲ.
ಯೆಹೋವನು ನೀತಿವಂತರನ್ನು ಸಂರಕ್ಷಿಸುವನು;
    ದುಷ್ಟರನ್ನಾದರೋ ನಾಶಪಡಿಸುವನು.