Add parallel Print Page Options

ರಚನೆಗಾರ: ದಾವೀದ.

14 ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು.
    ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು.
    ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.

ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ
    ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.
ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ.
    ಎಲ್ಲರೂ ಕೆಟ್ಟುಹೋಗಿದ್ದಾರೆ.
ಒಳ್ಳೆಯದನ್ನು ಮಾಡುವವನು ಇಲ್ಲ;
    ಒಬ್ಬನಾದರೂ ಇಲ್ಲ.

ದುಷ್ಟರು ಅರ್ಥಮಾಡಿಕೊಳ್ಳುವುದಿಲ್ಲವೇ?
    ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ.
    ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.
5-6 ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ.
    ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ.
ಆದರೆ ದೇವರು ನೀತಿವಂತರೊಂದಿಗಿದ್ದಾನೆ.
    ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು.

ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ?
    ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ.
ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು;
    ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.