Add parallel Print Page Options

ಸ್ತುತಿಗೀತೆ. ರಚನೆಗಾರ: ದಾವೀದ.

140 ಯೆಹೋವನೇ, ಕೆಡುಕರಿಂದ ನನ್ನನ್ನು ರಕ್ಷಿಸು.
    ಕ್ರೂರಿಗಳಿಂದ ನನ್ನನ್ನು ಕಾಪಾಡು.
    ಅವರು ಕೇಡುಮಾಡಬೇಕೆಂದಿದ್ದಾರೆ. ಅವರು ಯಾವಾಗಲೂ ಜಗಳವೆಬ್ಬಿಸುತ್ತಾರೆ.
ಅವರ ನಾಲಿಗೆಗಳು ಸರ್ಪಗಳಂತಿವೆ.
    ಅವರ ನಾಲಿಗೆಯ ಕೆಳಗೆ ಹಾವಿನ ವಿಷವಿದೆ.

ಯೆಹೋವನೇ, ದುಷ್ಟರಿಂದ ನನ್ನನ್ನು ರಕ್ಷಿಸು.
    ಕ್ರೂರಿಗಳಿಂದ ನನ್ನನ್ನು ಕಾಪಾಡು.
    ಅವರು ನನ್ನನ್ನು ಹಿಂದಟ್ಟಿ ನನಗೆ ಕೇಡುಮಾಡಬೇಕೆಂದಿದ್ದಾರೆ.
ಆ ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ;
    ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ;
    ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ.

ಯೆಹೋವನೇ, ನನ್ನ ದೇವರು ನೀನೇ.
    ನನ್ನ ಪ್ರಾರ್ಥನೆಗೆ ಕಿವಿಗೊಡು.
ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ.
    ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ.
ಯೆಹೋವನೇ, ಆ ದುಷ್ಟರ ದುರಾಶೆಯೂ
    ದುರಾಲೋಚನೆಯೂ ನೆರವೇರಲು ಬಿಡಬೇಡ.

ನನ್ನ ವೈರಿಗಳಿಗೆ ಜಯವಾಗಲು ಬಿಡಬೇಡ.
    ಅವರು ಕುಯುಕ್ತಿಗಳನ್ನು ಮಾಡುತ್ತಿದ್ದಾರೆ; ಅವುಗಳನ್ನು ವಿಫಲಗೊಳಿಸು.
10 ಅವರ ತಲೆಗಳ ಮೇಲೆ ಉರಿಯುವ ಕೆಂಡಗಳನ್ನು ಸುರಿದು
    ಬೆಂಕಿಯೊಳಗೆ ಎಸೆದುಬಿಡು;
    ಎಂದಿಗೂ ಹತ್ತಿ ಬರಲಾಗದ ಗುಂಡಿಯೊಳಗೆ ಅವರನ್ನು ಎಸೆದುಬಿಡು.
11 ಆ ಸುಳ್ಳುಗಾರರನ್ನು ಜೀವಂತವಾಗಿ ಉಳಿಸಬೇಡ.
    ಆ ಕೆಡುಕರಿಗೆ ಕೇಡುಗಳಾಗುವಂತೆ ಮಾಡು.
12 ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ಪಾಲಿಸುತ್ತಾನೆಂದು ನನಗೆ ಗೊತ್ತಿದೆ.
    ದೇವರು ಅಸಹಾಯಕರಿಗೆ ಸಹಾಯಮಾಡುವನು.
13 ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು;
    ಯಥಾರ್ಥವಂತರು ನಿನ್ನ ಸನ್ನಿಧಿಯಲ್ಲಿ ಜೀವಿಸುವರು.