Add parallel Print Page Options

ರಚನೆಗಾರ: ದಾವೀದ.

ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು!
    ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು!
ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ
    ಸುರಕ್ಷಿತ ಸ್ಥಳದಲ್ಲಿ ಸೇರಿಸು.

ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ?
    ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ?

ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂಬುದು ನಿಮಗೆ ತಿಳಿದಿರಲಿ.
    ನಾನು ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.

ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ.
    ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ.
ದೇವರಿಗೆ ಯೋಗ್ಯವಾದ ಯಜ್ಞಗಳನ್ನು ಅರ್ಪಿಸಿರಿ;
    ಯೆಹೋವನಲ್ಲಿಯೇ ಭರವಸೆಯಿಡಿರಿ!

“ನಮಗೆ ಒಳ್ಳೆಯದನ್ನು ಯಾರು ತೋರಿಸುವರು?
    ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು.
ಧಾನ್ಯಯವೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ.
ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು.
    ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ.