Add parallel Print Page Options

ದಾವೀದನು ಯೆಹೂದದ ಅರಣ್ಯದಲ್ಲಿದ್ದಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ.

63 ದೇವರೇ, ನೀನೇ ನನ್ನ ದೇವರು.
    ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ.
ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ;
    ನನ್ನ ದೇಹವು ನಿನಗಾಗಿ ಬಯಸಿದೆ.
ಹೌದು, ನಿನ್ನನ್ನು ನಿನ್ನ ಆಲಯದಲ್ಲಿ ನೋಡಿದ್ದೇನೆ,
    ನಿನ್ನ ಶಕ್ತಿಯನ್ನೂ ಮಹಿಮೆಯನ್ನೂ ಕಂಡಿದ್ದೇನೆ.
ನಿನ್ನ ಪ್ರೀತಿಯು ಜೀವಕ್ಕಿಂತಲೂ ಶ್ರೇಷ್ಠ.
    ನನ್ನ ತುಟಿಗಳು ನಿನ್ನನ್ನು ಕೊಂಡಾಡುತ್ತವೆ.
ಹೌದು, ನನ್ನ ಜೀವಮಾನವೆಲ್ಲಾ ನಿನ್ನನ್ನು ಕೊಂಡಾಡುವೆನು.
    ನಿನ್ನ ಹೆಸರಿನಲ್ಲಿ ಕೈಮುಗಿದು ಪ್ರಾರ್ಥಿಸುವೆನು.
ಮೃಷ್ಟಾನ್ನವನ್ನು ತಿಂದಿರುವವನಂತೆ ತೃಪ್ತನಾಗಿರುವೆನು.
    ನನ್ನ ಬಾಯಿ ನಿನ್ನನ್ನು ಕೊಂಡಾಡುವುದು.
ಹಾಸಿಗೆಯು ಮೇಲೆ ಮಲಗಿರುವಾಗಲೂ ನಿನ್ನನ್ನು ಜ್ಞಾಪಿಸಿಕೊಳ್ಳುವೆನು.
    ಮಧ್ಯರಾತ್ರಿಯಲ್ಲಿಯೂ ನಿನ್ನನ್ನು ನೆನಸಿಕೊಳ್ಳುವೆನು.
ನಿಜವಾಗಿಯೂ ನೀನೇ ನನಗೆ ಸಹಾಯಕ.
    ನಿನ್ನ ರೆಕ್ಕೆಗಳ ಮರೆಯಲ್ಲಿ ಆನಂದಘೋಷ ಮಾಡುವೆನು.
ನನ್ನ ಆತ್ಮವು ನಿನ್ನನ್ನು ಅಂಟಿಕೊಂಡಿರುವುದು.
    ನಿನ್ನ ಬಲಗೈ ನನ್ನ ಕೈಹಿಡಿದು ನಡೆಸುವುದು.

ನನ್ನನ್ನು ಕೊಲ್ಲಬೇಕೆಂದಿರುವವರು
    ಪಾತಾಳಕ್ಕೆ ಇಳಿದುಹೋಗುವರು.
10 ಅವರು ಖಡ್ಗಗಳಿಂದ ಕೊಲ್ಲಲ್ಪಡುವರು.
    ಅವರ ಶವಗಳು ನರಿಗಳ ಪಾಲಾಗುವವು.
11 ರಾಜನಾದರೋ ತನ್ನ ದೇವರಲ್ಲಿಯೇ ಸಂತೋಷಿಸುವನು.
    ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು,
    ಯಾಕೆಂದರೆ ಆ ಸುಳ್ಳುಗಾರರನ್ನೆಲ್ಲಾ ಆತನು ಸೋಲಿಸಿದ್ದಾನೆ.