Add parallel Print Page Options

ಸ್ತುತಿಗೀತೆ. ರಚನೆಗಾರ: ಆಸಾಫ.

75 ದೇವರೇ, ನಿನ್ನನ್ನು ಕೊಂಡಾಡುವೆವು!
    ನಿನ್ನ ಹೆಸರನ್ನು ಸ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ;
    ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ.

ದೇವರು ಹೀಗೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ;
    ನಾನು ನೀತಿಯಿಂದಲೇ ತೀರ್ಪುಕೊಡುವೆ.
ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ
    ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.

4-5 “ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ!
    ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ’” ಎಂದು ಹೇಳುವೆನು.

ಭೂಲೋಕದ ಯಾವ ಶಕ್ತಿಯೂ
    ಮನುಷ್ಯನನ್ನು ಉದ್ಧಾರ ಮಾಡಲಾರದು.
ನ್ಯಾಯಾಧಿಪತಿಯು ದೇವರೇ.
    ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ.
    ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.
ಯೆಹೋವನ ಕೈಯಲ್ಲಿ ಪಾತ್ರೆಯಿದೆ.
    ಆ ಪಾತ್ರೆಯು ವಿಷ ದ್ರಾಕ್ಷಾರಸದಿಂದ ತುಂಬಿದೆ.
ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು;
    ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!
ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು;
    ಇಸ್ರೇಲರ ದೇವರನ್ನು ಸಂಕೀರ್ತಿಸುವೆನು.
10 ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು
    ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು.