Add parallel Print Page Options

ರಚನೆಗಾರ: ದಾವೀದ.

ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು.
    ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು.

ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ;
    ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.

ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ
    ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು.
ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು?
    ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು?
ಮನುಷ್ಯರು ಎಷ್ಟರವರು?
    ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?

ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ.
    ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ.
    ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.
ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ.
    ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ.
ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು.
ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ
    ದೊರೆತನ ಮಾಡುವರು.
ನಮ್ಮ ದೇವರಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಎಷ್ಟೋ ಅತಿಶಯವಾಗಿದೆ.