Add parallel Print Page Options

ಗುಣಹೊಂದಿದ ಸೇವಕ

(ಮತ್ತಾಯ 8:5-13; ಯೋಹಾನ 4:43-54)

ಯೇಸುವು ಜನರಿಗೆ ಈ ಸಂಗತಿಗಳೆಲ್ಲವನ್ನು ಹೇಳಿ ಮುಗಿಸಿದ ನಂತರ ಕಪೆರ್ನೌಮಿಗೆ ಹೋದನು. ಅಲ್ಲಿ ಒಬ್ಬ ಸೇನಾಧಿಪತಿ[a] ಇದ್ದನು. ಅವನ ಪ್ರಿಯ ಸೇವಕನೊಬ್ಬನು ಕಾಯಿಲೆಯಿಂದ ಸಾಯುವ ಸ್ಥಿತಿಯಲ್ಲಿದ್ದನು. ಯೇಸುವಿನ ಸುದ್ದಿಯನ್ನು ಕೇಳಿದಾಗ, ಅವನು ಕೆಲವು ಹಿರಿಯ ಯೆಹೂದ್ಯನಾಯಕರನ್ನು ಆತನ ಬಳಿಗೆ ಕಳುಹಿಸಿ ತನ್ನ ಸೇವಕನ ಪ್ರಾಣವನ್ನು ಉಳಿಸಿಕೊಡಬೇಕೆಂದು ಬೇಡಿಕೊಂಡನು. ಆ ಜನರು ಯೇಸುವಿನ ಬಳಿಗೆ ಬಂದು, “ಈ ಸೇನಾಧಿಪತಿ ನಿನ್ನ ಸಹಾಯ ಹೊಂದುವುದಕ್ಕೆ ಯೋಗ್ಯನಾಗಿದ್ದಾನೆ. ಅವನು ನಮ್ಮ ಜನರನ್ನು ಪ್ರೀತಿಸುತ್ತಾನೆ ಮತ್ತು ನಮಗೋಸ್ಕರ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿದ್ದಾನೆ” ಎಂದು ಹೇಳಿ ಬಹಳವಾಗಿ ಬೇಡಿಕೊಂಡರು.

ಆದ್ದರಿಂದ ಯೇಸು ಅವರ ಜೊತೆ ಹೊರಟನು. ಯೇಸು ಮನೆಯ ಹತ್ತಿರ ಬರುತ್ತಿರುವಾಗ, ಆ ಅಧಿಕಾರಿಯು ಸ್ನೇಹಿತರನ್ನು, “ಪ್ರಭುವೇ, ನೀನು ನನ್ನ ಮನೆಗೆ ಬರುವಷ್ಟು ನಾನು ಯೋಗ್ಯನಲ್ಲ. ನಿನ್ನ ಬಳಿಗೆ ಬರುವುದಕ್ಕೂ ನನಗೆ ಯೋಗ್ಯತೆ ಇಲ್ಲ. ನೀನು ಕೇವಲ ಒಂದು ಆಜ್ಞೆ ಕೊಟ್ಟರೆ ಸಾಕು, ನನ್ನ ಆಳು ಗುಣಹೊಂದುವನು. ನಿನ್ನ ಅಧಿಕಾರವನ್ನು ನಾನು ತಿಳಿದುಕೊಂಡಿದ್ದೇನೆ. ನಾನೂ ಮತ್ತೊಬ್ಬರ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ. ನಾನು ಒಬ್ಬ ಸೈನಿಕನಿಗೆ, ‘ಹೋಗು’ ಎಂದು ಹೇಳಿದರೆ, ಅವನು ಹೋಗುತ್ತಾನೆ. ಇನ್ನೊಬ್ಬ ಸೈನಿಕನಿಗೆ, ‘ಬಾ’ ಎಂದು ಹೇಳಿದರೆ, ಅವನು ಬರುತ್ತಾನೆ. ನನ್ನ ಆಳಿಗೆ, ‘ಇದನ್ನು ಮಾಡು’ ಎಂದು ಹೇಳಿದರೆ, ಅವನು ನನಗೆ ವಿಧೇಯನಾಗುತ್ತಾನೆ” ಎಂದು ಯೇಸುವಿಗೆ ಹೇಳಲು ಕಳುಹಿಸಿದನು.

ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು ತನ್ನನ್ನು ಹಿಂಬಾಲಿಸುತ್ತಿದ್ದ ಜನರ ಕಡೆಗೆ ನೋಡಿ, “ಇಷ್ಟು ದೊಡ್ಡ ನಂಬಿಕೆಯಿರುವ ವ್ಯಕ್ತಿಯನ್ನು ನಾನು ಇಸ್ರೇಲಿನಲ್ಲಿಯೂ ನೋಡಲಿಲ್ಲ ಎಂದು ನಿಮಗೆ ಹೇಳುತ್ತೇನೆ” ಎಂದನು.

10 ಆ ಅಧಿಕಾರಿಯು ಕಳುಹಿಸಿದ್ದ ಜನರು ಯೇಸುವಿನ ಬಳಿಯಿಂದ ಹಿಂತಿರುಗಿ ಹೋದಾಗ, ಆ ಸೇವಕನಿಗೆ ಆಗಲೇ ಗುಣವಾಗಿರುವುದನ್ನು ಕಂಡರು.

Read full chapter

Footnotes

  1. 7:2 ಸೇನಾಧಿಪತಿ ನೂರು ಮಂದಿ ಸೈನಿಕರ ಮೇಲೆ ಅಧಿಕಾರವಿದ್ದ ರೋಮ್ ಸೈನ್ಯದ ಅಧಿಕಾರಿ.