Add parallel Print Page Options

ಯೇಸುವಿನ ಆಜ್ಞೆಗೆ ಬಿರುಗಾಳಿಯ ವಿಧೇಯತೆ

(ಮತ್ತಾಯ 8:23-27; ಲೂಕ 8:22-25)

35 ಆ ದಿನ ಸಂಜೆ, ಯೇಸು ತನ್ನ ಶಿಷ್ಯರಿಗೆ “ನನ್ನೊಂದಿಗೆ ಬನ್ನಿ, ಸರೋವರದ ಆಚೆದಡಕ್ಕೆ ಹೋಗೋಣ” ಎಂದು ಹೇಳಿದನು. 36 ಯೇಸು ಮತ್ತು ಆತನ ಶಿಷ್ಯರು ಅಲ್ಲಿದ್ದ ಜನರನ್ನು ಅಲ್ಲಿಯೇ ಬಿಟ್ಟುಹೋದರು. ಯೇಸು ಕುಳಿತುಕೊಂಡು ಉಪದೇಶಿಸುತ್ತಿದ್ದ ದೋಣಿಯಲ್ಲಿಯೇ ಅವರು ಹೋದರು. ಅವರೊಂದಿಗೆ ಬೇರೆ ದೋಣಿಗಳೂ ಇದ್ದವು. 37 ಅವರು ಹೋಗುತ್ತಿರಲು ಸರೋವರದ ಮೇಲೆ ಬಿರುಗಾಳಿ ಬೀಸಿತು. ಎತ್ತರವಾದ ಅಲೆಗಳು ದೋಣಿಗೆ ಅಪ್ಪಳಿಸತೊಡಗಿದ್ದರಿಂದ ದೋಣಿಯು ನೀರಿನಿಂದ ತುಂಬಿಹೋಯಿತು. 38 ಯೇಸುವು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ತಲೆಯನ್ನಿಟ್ಟು ನಿದ್ರಿಸುತ್ತಿದ್ದನು. ಶಿಷ್ಯರು ಆತನ ಬಳಿಗೆ ಹೋಗಿ, ಆತನನ್ನು ಎಬ್ಬಿಸಿ, “ಗುರುವೇ, ನೀನು ನಮ್ಮ ಬಗ್ಗೆ ಚಿಂತಿಸುವುದಿಲ್ಲವೆ? ನಾವು ಮುಳುಗಿಹೋಗುತ್ತಿದ್ದೇವೆ!” ಎಂದರು.

39 ಯೇಸು ಎಚ್ಚೆತ್ತು ಬಿರುಗಾಳಿ ಮತ್ತು ಅಲೆಗಳಿಗೆ, “ಪ್ರಶಾಂತವಾಗಿರಿ! ಮೊರೆಯದಿರಿ!” ಎಂದು ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತುಹೋಯಿತು ಮತ್ತು ಸರೋವರವು ಪ್ರಶಾಂತವಾಯಿತು.

40 ಯೇಸು ತನ್ನ ಶಿಷ್ಯರಿಗೆ, “ನೀವೇಕೆ ಹೆದರುತ್ತೀರಿ? ನಿಮ್ಮಲ್ಲಿ ಇನ್ನೂ ನಂಬಿಕೆಯಿಲ್ಲವೇ?” ಎಂದು ಕೇಳಿದನು.

41 ಶಿಷ್ಯರು ಬಹಳ ಭಯಪಟ್ಟು, “ಈತನು ಯಾರಿರಬಹುದು? ಗಾಳಿ ಮತ್ತು ನೀರು ಸಹ ಈತನ ಮಾತನ್ನು ಕೇಳುತ್ತವೆಯಲ್ಲಾ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

Read full chapter