Add parallel Print Page Options

ಮೋಶೆ ಮತ್ತು ಎಲೀಯರೊಡನೆ ಯೇಸು

(ಮತ್ತಾಯ 17:1-13; ಲೂಕ 9:28-36)

ಆರು ದಿನಗಳ ನಂತರ ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಯೇಸು ಎತ್ತರವಾದ ಬೆಟ್ಟದ ಮೇಲೆ ಹೋದನು. ಅಲ್ಲಿ ಅವರು ಮಾತ್ರ ಇದ್ದರು. ಈ ಶಿಷ್ಯರು ಯೇಸುವನ್ನು ನೋಡುತ್ತಿರಲು, ಇದ್ದಕ್ಕಿದ್ದಂತೆ ಆತನು ರೂಪಾಂತರ ಹೊಂದಿದನು. ಯೇಸುವಿನ ಬಟ್ಟೆಗಳು ಬಿಳುಪಾಗಿ ಹೊಳೆಯುತ್ತಿದ್ದವು. ಅಷ್ಟು ಬಿಳುಪಾದ ಬಟ್ಟೆಗಳನ್ನು ತಯಾರಿಸಲು ಸಾಧ್ಯವಿರಲಿಲ್ಲ. ಆಗ ಮೋಶೆ ಮತ್ತು ಎಲೀಯ ಅಲ್ಲಿ ಪ್ರತ್ಯಕ್ಷರಾಗಿ ಯೇಸುವಿನೊಂದಿಗೆ ಮಾತಾಡುತ್ತಿದ್ದರು.

ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ನಾವು ಇಲ್ಲಿ ಮೂರು ಗುಡಾರಗಳನ್ನು ಹಾಕುತ್ತೇವೆ. ಒಂದು ನಿನಗೆ, ಒಂದು ಮೋಶೆಗೆ ಮತ್ತೊಂದು ಎಲೀಯನಿಗೆ” ಎಂದು ಹೇಳಿದನು. ಪೇತ್ರನಿಗೆ ಏನು ಹೇಳಬೇಕೋ ತಿಳಿಯಲಿಲ್ಲ. ಏಕೆಂದರೆ ಅವನು ಮತ್ತು ಉಳಿದ ಇನ್ನಿಬ್ಬರು ಶಿಷ್ಯರು ಬಹಳ ಭಯಗೊಂಡಿದ್ದರು.

ಆಗ ಮೋಡವು ಬಂದು, ಅವರನ್ನು ಮುಸುಕಿತು. ಆ ಮೋಡದ ಒಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ಈತನಿಗೆ ವಿಧೇಯರಾಗಿ” ಎಂದು ಹೇಳಿತು.

ಆಗ ಪೇತ್ರ, ಯಾಕೋಬ ಮತ್ತು ಯೋಹಾನರು ಕಣ್ಣೆತ್ತಿ ನೋಡಿದಾಗ ಯೇಸು ಒಬ್ಬನೇ ಅಲ್ಲಿದ್ದನು.

ಯೇಸು ಮತ್ತು ಆ ಶಿಷ್ಯರು ಹಿಂತಿರುಗಿ ಬೆಟ್ಟದಿಂದ ಕೆಳಗಿಳಿದು ಬರುತ್ತಿರುವಾಗ, ಆತನು ಅವರಿಗೆ, “ನೀವು ಬೆಟ್ಟದ ಮೇಲೆ ನೋಡಿದ ಸಂಗತಿಗಳ ಬಗ್ಗೆ ಯಾರಿಗೂ ಹೇಳಬೇಡಿ. ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬರುವವರೆಗೆ ಕಾದುಕೊಂಡಿರಿ” ಎಂದು ಆಜ್ಞಾಪಿಸಿದನು.

10 ಆದ್ದರಿಂದ ಆ ಶಿಷ್ಯರು ಈ ಸಂಗತಿಗಳನ್ನು ಯಾರಿಗೂ ತಿಳಿಸಲಿಲ್ಲ. ಆದರೆ “ಸತ್ತು ಜೀವಂತವಾಗಿ ಎದ್ದುಬರುವುದು” ಎಂದರೇನು? ಎಂದು ತಮ್ಮತಮ್ಮಲ್ಲಿಯೇ ಚರ್ಚಿಸಿದರು. 11 ಶಿಷ್ಯರು ಯೇಸುವಿಗೆ, “ಎಲೀಯನೇ ಮೊದಲು ಬರಬೇಕೆಂದು ಧರ್ಮೋಪದೇಶಕರು ಹೇಳಲು ಕಾರಣವೇನು?” ಎಂದು ಕೇಳಿದರು.

12 ಯೇಸು ಅವರಿಗೆ, “ಎಲೀಯನೇ ಮೊದಲು ಬರಬೇಕೆಂದು ಅವರು ಹೇಳುವುದು ಸರಿ. ಎಲೀಯನು ಎಲ್ಲವನ್ನು ಸರಿಪಡಿಸುತ್ತಾನೆ. ಆದರೆ ಮನುಷ್ಯಕುಮಾರನು ಬಹಳ ಸಂಕಟವನ್ನು ಅನುಭವಿಸುವನೆಂತಲೂ ಜನರು ಆತನನ್ನು ಹೀನೈಸುವರೆಂತಲೂ ಪವಿತ್ರಗ್ರಂಥವು ಏಕೆ ಹೇಳುತ್ತದೆ? 13 ಎಲೀಯನು ಈಗಾಗಲೇ ಬಂದಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ ಮತ್ತು ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಕೇಡನ್ನು ಮಾಡಿದರು. ಅವನಿಗೆ ಹೀಗಾಗುವುದೆಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆದಿತ್ತು” ಎಂದು ಉತ್ತರಿಸಿದನು.

Read full chapter