Add parallel Print Page Options

ಯೇಸುವಿನ ಅಧಿಕಾರ ದೇವರದೇ

(ಮಾರ್ಕ 3:20-30; ಲೂಕ 11:14-23; 12:10)

22 ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು. 23 ಜನರೆಲ್ಲರೂ ಬೆರಗಾದರು. “ದೇವರು ಕಳುಹಿಸಿಕೊಡುವುದಾಗಿ ನಮಗೆ ವಾಗ್ದಾನಮಾಡಿದ್ದ ದಾವೀದನ ಕುಮಾರನು ಈತನೇ (ಯೇಸು) ಆಗಿರಬಹುದು” ಎಂದು ಮಾತಾಡಿಕೊಂಡರು.

24 ಜನರು ಹೀಗೆ ಮಾತಾಡುತ್ತಿದ್ದುದನ್ನು ಕೇಳಿಸಿಕೊಂಡ ಫರಿಸಾಯರು, “ಯೇಸು ಬೆಲ್ಜೆಬೂಲನ ಶಕ್ತಿಯ ಮೂಲಕ ಜನರನ್ನು ದೆವ್ವಗಳಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದರು.

25 ಫರಿಸಾಯರು ಆಲೋಚಿಸುತ್ತಿದ್ದ ಸಂಗತಿಗಳು ಯೇಸುವಿಗೆ ತಿಳಿದಿದ್ದವು. ಆದ್ದರಿಂದ ಯೇಸು ಅವರಿಗೆ, “ತನಗೆ ವಿರೋಧವಾಗಿ ತಾನೇ ಹೋರಾಡುವ ರಾಜ್ಯವು ನಾಶವಾಗುವುದು. ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವು ಸ್ಥಿರವಾಗಿರುವುದಿಲ್ಲ. ಭೇದಭಾವ ಹೊಂದಿರುವ ಪ್ರತಿಯೊಂದು ಕುಟುಂಬವು ಅಭಿವೃದ್ಧಿಯಾಗುವುದಿಲ್ಲ. 26 ಹೀಗಿರಲು ಸೈತಾನನು ತನ್ನ ಸ್ವಂತ ದೆವ್ವಗಳನ್ನೇ ಹೊರಗೆ ಓಡಿಸಿದರೆ ಅವನು ತನ್ನಲ್ಲಿಯೇ ಒಡಕನ್ನು ಮಾಡಿದಂತಾಯಿತು. ಆಗ ಅವನು ಮತ್ತು ಅವನ ರಾಜ್ಯವು ಸ್ಥಿರವಾಗಿರಲು ಹೇಗೆ ಸಾಧ್ಯ? 27 ನಾನು ಸೈತಾನನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತೇನೆ ಎಂದು ನೀವು ಹೇಳುತ್ತೀರಿ. ಅದು ನಿಜವಾದರೆ, ನಿಮ್ಮ ಜನರು ಯಾವ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನ್ನು ತಪ್ಪಿತಸ್ಥರೆಂದು ನಿರೂಪಿಸುತ್ತಾರೆ. 28 ಆದರೆ ನಾನು ದೇವರಾತ್ಮನ ಶಕ್ತಿಯ ಮೂಲಕ ದೆವ್ವಗಳನ್ನು ಬಿಡಿಸುತ್ತೇನೆ. ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ. 29 ಒಬ್ಬ ವ್ಯಕ್ತಿಯು ಬಲಿಷ್ಠನೊಬ್ಬನ ಮನೆಗೆ ನುಗ್ಗಿ ಅವನ ಸ್ವತ್ತನ್ನು ಕದಿಯಬೇಕಿದ್ದರೆ, ಮೊದಲು ಅವನು ಆ ಬಲಿಷ್ಠನನ್ನು ಕಟ್ಟಿಹಾಕಬೇಕು. ಆಗ ಆ ಬಲಿಷ್ಠನ ಮನೆಯ ಸ್ವತ್ತನ್ನು ಕದಿಯಲು ಅವನಿಗೆ ಸಾಧ್ಯವಾಗುವುದು. 30 ನನ್ನೊಂದಿಗೆ ಇಲ್ಲದವನು ನನಗೆ ವಿರೋಧಿಯಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ.

31 “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ. 32 ಮನುಷ್ಯಕುಮಾರನಿಗೆ ವಿರೋಧವಾಗಿ ಮಾತನಾಡಿದರೂ ಅದಕ್ಕೆ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ ಅದಕ್ಕೆ ಕ್ಷಮಾಪಣೆಯು ಇಹದಲ್ಲಾಗಲಿ ಪರದಲ್ಲಾಗಲಿ ಇಲ್ಲವೇ ಇಲ್ಲ.

Read full chapter